ಬೆಂಗಳೂರು(05-10-2020): ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ಅಧಿಕಾರಿಗಳು ಡಿಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದು, ಶೀಘ್ರ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂದು ಸಿಬಿಐ ಅಧಿಕಾರಿಗಳು ಡಿಕೆ ಶಿವಕುಮಾರ್ ಗೆ ಸಂಬಂಧಿಸಿದ 14ಕಡೆಗಳಲ್ಲಿ ದಾಳಿ ನಡೆಸಿದ್ದರು. ಆರ್ಆರ್ ನಗರ ಮತ್ತು ಶಿರಾ ಉಪಚುನಾವಣೆ ಸಮೀಪಿಸುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷರು ಬಂಧನರಾಗುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಈ ಮಧ್ಯೆ ಪ್ರತಿಪಕ್ಷಗಳು ಕೂಡ ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಕಳೆದ ವರ್ಷ ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ಬಂಧಿಸಿದ್ದರು. ಇದೀಗ ಮತ್ತೊಮ್ಮೆ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐನಿಂದ ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ಗೆ ಬಂಧನ ಭೀತಿ ಎದುರಾಗಿದೆ.
ಬೆಂಗಳೂರಿನಲ್ಲಿರುವ ಗಂಗಾನಗರ ಸಿಬಿಐ ಕಚೇರಿ ಬಳಿ ಬಿಗಿ ಭದ್ರತೆ ಒದಗಿಸಲಾಗಿದೆ.ಸಿಬಿಐ ಕಚೇರಿ ಬಳಿ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಹೆಚ್ಚಿನ ಪೊಲೀಸರನ್ನೂ ನಿಯೋಜನೆ ಮಾಡಲಾಗಿದೆ. ಸಿಬಿಐ ಕಚೇರಿ ಬಳಿ ಇಬ್ಬರು ಎಸಿಪಿಗಳನ್ನು ನಿಯೋಜನೆ ಮಾಡಲಾಗಿದೆ.