ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ, ಪ್ರಥಮ ಪಿಯು ವಿಧ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಪಾಸ್: ‌ಸಚಿವ ಸುರೇಶ್ ಕುಮಾರ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೇ 24 ರಿಂದ ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಸುರೇಶ್​ ಕುಮಾರ್​, ರಾಜ್ಯದಲ್ಲಿ ಕೋವಿಡ್​ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದ್ವಿತೀಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಪರೀಕ್ಷೆ ಆರಂಭವಾಗುವ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು. ಈಗಾಗಲೇ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಂಡಿರುವ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ವಿಚಲಿತರಾಗದೆ ಎಂದಿನಂತೆ ತಮ್ಮ ವಿದ್ಯಾಭ್ಯಾಸ ಮುಂದುವರಿಸಬೇಕು ಎಂದು ಮನವಿ ಮಾಡಿದರು.

ಮೇ24 ರಿಂದ ಜೂನ್ 16 ರವರೆಗೆ ನಡೆಯಬೇಕಾದ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಇಲಾಖೆ ಎಲ್ಲಾ ಸಿದ್ಧತೆಗಳು ಮಾಡಿಕೊಂಡಿತ್ತು. ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯ ನಂತರ ಪ್ರಥಮ ಪಿಯುಸಿ ಪರೀಕ್ಷೆ ನಡೆಸುವ ಬಗ್ಗೆ ಈ ಹಿಂದೆ ನಿರ್ಧರಿಸಲಾಗಿತ್ತು. ಆದರೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ರದ್ದುಗೊಳಿಸಿ ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ಉಪನ್ಯಾಸಕರು ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ ಕೆಲಸ ಮಾಡಲು ಸೂಚಿಸಲಾಗಿದೆ. ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ, ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲ ಆಡಳಿತಾತ್ಮಕ ಕ್ರಮಗಳಿಗೆ ಉಪನ್ಯಾಸಕರು ಸದಾ ಲಭ್ಯವಾಗಬೇಕು ಎಂದಿದ್ದಾರೆ. ಹಾಗೆಯೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳನ್ನು ಪೂರೈಸಬೇಕಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು