ಮಾಲ್ಡಾ(19-11-2020): ಪ್ಲಾಸ್ಟಿಕ್ ಫ್ಯಾಕ್ಟರಿಯೊಂದರಲ್ಲಿ ಸ್ಪೋಟ ಸಂಭವಿಸಿದ ಪರಿಣಾಮ ಐದು ಸಾವು ಉಂಟಾಗಿದೆ. ಹಲವರು ಗಾಯಗೊಂಡಿದ್ದಾರೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಸುಜಾಪುರ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದ್ದು, ಮೃತಪಟ್ಟವರೆಲ್ಲರೂ ಫ್ಯಾಕ್ಟರಿ ಉದ್ಯೋಗಿಗಳಾಗಿದ್ದಾರೆಂದು ತಿಳಿದು ಬಂದಿದೆ.
ಬೆಳಿಗ್ಗೆ ಹನ್ನೊಂದು ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಪೋಲೀಸ್ ಪಡೆ ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿ, ಅವಶೇಷಗಳಡಿಯಿಂದ ಹಲವರನ್ನು ರಕ್ಷಿಸಿದೆ. ಫ್ಯಾಕ್ಟರಿಯೊಳಗಿದ್ದ ಬೃಹತ್ ಯಂತ್ರದಲ್ಲಿ ಕಾಣಿಸಿಕೊಂಡ ತಾಂತ್ರಿಕ ತೊಂದರೆ ಸ್ಫೋಟಕ್ಕೆ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ಮತ್ತು ಗಾಯಾಳುಗಳಿಗೆ ತಲಾ ಐವತ್ತು ಸಾವಿರ ಪರಿಹಾರ ಧನವನ್ನು ಘೋಷಿಸಿದ್ದಾರೆ. ಘಟನೆಯ ಕುರಿತಂತೆ ಹೆಚ್ಚಿನ ತನಿಖೆಗೆ ಆದೇಶಿಸಲಾಗಿದೆ.