ನವದೆಹಲಿ(14-12-2020):ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ರೈತರು ಕಳೆದ 19 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಮೂರು ಮಸೂದೆಗಳನ್ನು ಹಿಂತೆಗೆದುಕೊಳ್ಳಲು ಪಟ್ಟು ಹಿಡಿದ ರೈತರು ಇಂದಿನಿಂದ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತ ಸಂಘಗಳು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಬೇಕೆಂದು ಕರೆ ನೀಡಿವೆ.
ಸೋಮವಾರ ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ರೈತರು ಆಯಾ ಸ್ಥಳಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ರೈತ ಮುಖಂಡ ಗುರ್ನಮ್ ಸಿಂಗ್ ಚಾದುನಿ ತಿಳಿಸಿದ್ದಾರೆ. ಅಲ್ಲದೆ ದೇಶದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಧರಣಿಗಳನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರತಿಭಟನಾ ನಿರತ ರೈತರಿಗೆ ಒಗ್ಗಟ್ಟನ್ನು ಪ್ರದರ್ಶಿಸಲು ಇಂದು ಉಪವಾಸ ಆಚರಿಸುವುದಾಗಿ ಘೋಷಿಸಿದ್ದಾರೆ.ಅಹಂಕಾರವನ್ನು ದೂರವಿಟ್ಟು ಶಾಸನವನ್ನು ರದ್ದುಗೊಳಿಸುವಂತೆ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.