ನವದೆಹಲಿ(12-10-2020): ಶೇಖ್ ಜಯೆದ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಭರ್ಜರಿ ಗೆಲುವನ್ನು ಸಾಧಿಸಿ ಅಗ್ರಸ್ಥಾನಕ್ಕೇರಿದೆ.
ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 4 ವಿಕೆಟ್ ಗೆ 164 ರನ್ ಗಳಿಸಿತು. ಈ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ 2 ಎಸೆತ ಬಾಕಿ ಇರುವಂತೆಯೇ 5 ವಿಕೆಟ್ ಕಳೆದುಕೊಂಡು ಜಯಗಳಿಸಿತು.
ಮುಂಬೈ ತಂಡ ಆಡಿದ 7 ಪಂದ್ಯಗಳಿಂದ 5 ಜಯ ಹಾಗೂ 10 ಅಂಕದೊಂದಿಗೆ ಅಗ್ರಸ್ಥಾನಕ್ಕೇರಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಅಷ್ಟೇ ಅಂಕ ಗಳಿಸಿದ್ದರೂ ರನ್ ಸರಾಸರಿಯಲ್ಲಿ ಹಿಂದೆ ಬಿದ್ದು 2ನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.
ಆರಂಭಿಕ ಕ್ವಿಂಟನ್ ಡಿ ಕಾಕ್ ಮತ್ತು ಸೂರ್ಯಕುಮಾರ್ ಯಾದವ್ ಅವರ ಅರ್ಧಶತಕಗಳ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ 5 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹೆಡೆಮುರಿ ಕಟ್ಟಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಅಗ್ರಸ್ಥಾನಕ್ಕೇರಿದೆ.