ಬೆಂಗಳೂರು(29-11-2020) ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರದ ಸಮೀಕ್ಷೆ ಬೆಚ್ಚಿಬೀಳಿಸುವ ಸತ್ಯಾಂಶವನ್ನೇ ಬಹಿರಂಗ ಮಾಡಿದ್ದು, ರಾಜ್ಯದ ಶೇ.65 ಮಕ್ಕಳಲ್ಲಿ ಅಪೌಷ್ಟಿಕತೆ ಕಂಡುಬಂದಿದೆ ಎಂದು ತಿಳಿಸಿದೆ.
ದಕ್ಷಿಣದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಅಪೌಷ್ಟಿಕತೆ ಪ್ರಮಾಣ ಹೆಚ್ಚಳವಾಗಿದೆ. ದಕ್ಷಿಣ ಕರ್ನಾಟಕಕ್ಕೆ ಹೋಲಿಕೆ ಮಾಡಿದರೆ ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಕ್ಕಳು ಅಪೌಷ್ಟಿಕತೆಗೆ ಒಳಗಾಗಿದ್ದಾರೆ ಎನ್ನುವುದನ್ನು ವರದಿ ತಿಳಿಸಿದೆ.
ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳು ಹೆಚ್ಚು ಅಪೌಷ್ಟಿಕತೆಗೆ ಒಳಗಾಗಿದ್ದಾರೆ. ಶೇ.60.7ರಷ್ಟು ಗಂಡು ಮಕ್ಕಳು ಕಡಿಮೆ ತೂಕ ಹೊಂದಿದ್ದರೆ ಶೇ.68.3ರಷ್ಟು ಹೆಣ್ಣು ಮಕ್ಕಳು ಕಡಿಮೆ ತೂಕ ಹೊಂದಿದ್ದಾರೆ.
ಜಾತಿ ಆಧಾರಿತವಾಗಿ ನೋಡಿದರೆ ಪರಿಶಿಷ್ಟ ವರ್ಗದ ಮಕ್ಕಳು ಹೆಚ್ಚಾಗಿ ಅಪೌಷ್ಟಿಕತೆಗೆ ಒಳಗಾಗಿದ್ದಾರೆ. ಶೇ.71.43 ರಷ್ಟು ಎಸ್ಸಿ-ಎಸ್ಟಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಇದು ಇತರ ಜಾತಿಗಳಿಗೆ ಹೋಲಿಸಿದರೆ ಅತ್ಯಧಿಕವಾಗಿದೆ. ಇತರ ಸಮುದಾಯದ ಶೇ.63.04 ಮಕ್ಕಳು ಕಡಿಮೆ ತೂಕ ಹೊಂದಿದ್ದಾರೆಂದು ವರದಿ ಬಹಿರಂಗಪಡಿಸಿದೆ.