ಬೆಂಗಳೂರು(11-10-2020): 2020ರ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಫೈಲ್ ಆದ ವಿದ್ಯಾರ್ಥಿಗಳನ್ನು ಪಾಸ್ ಮಾಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಈ ಕುರಿತು ಕಾಲೇಜುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, 2020 ಪ್ರಥಮ ಪಿಯುಸಿ ಅಂತಿಮ ಪರೀಕ್ಷೆಗೆ ಗೈರು ಹಾಜರಾದ ಮತ್ತು ಜು.13ಕ್ಕೂ ಮುನ್ನ ಸುತ್ತೋಲೆಯಂತೆ ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಅ.20 ರೊಳಗೆ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಬೇಕು. ಫಲಿತಾಂಶದಲ್ಲಿ ಅನುತ್ತೀರ್ಣರಾದವರಿಗೆ ಪಾಸ್ ಮಾರ್ಕ್ ನೀಡಿ ಪಾಸ್ ಮಾಡಬೇಕು ಎಂದು ಸೂಚಿಸಲಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಶೈಕ್ಷಣಿಕ ವರ್ಷದ ಅಂತಿಮ ಪರೀಕ್ಷೆ ಮತ್ತು ಈ ಬಾರಿಯ ಶೈಕ್ಷಣಿಕ ವರ್ಷದ ಆರಂಭಕ್ಕೂ ಸಮಸ್ಯೆಯಾಗಿದೆ. ಪೂರಕ ಪರೀಕ್ಷೆಗೂ ಸಮಸ್ಯೆ ಎದುರಾಗಿದೆ. ಇದರಿಂದಾಗಿ ಮಕ್ಕಳ ಭವಿಷ್ಯವನ್ನು ಗಣನೆಗೆ ತೆಗೆದು ಪದವಿ ಪೂರ್ವ ಶಿಕ್ಷಣ ಇಲಾಖೆ ಈ ಸೂಚನೆಯನ್ನು ನೀಡಿದೆ.