ಶಾಲಾ ಶುಲ್ಕ ವಿಚಾರದ ಕುರಿತು ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸಬೇಕು: ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಶುಲ್ಕ ವಿಚಾರದಲ್ಲಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪೋಷಕರು ಪಾವತಿಸಬೇಕಾದ ರಿಯಾಯ್ತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಿನ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್‍ಗಳಿಗೆ ಪಾವತಿಸಬೇಕಾದ ಕೊರೋನಾ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿ ಮುಂತಾದ ವಿಚಾರಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರಿಗಾಗುವ ಹೊರೆ ತಗ್ಗಿಸಲು ಸಾಧ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

ಕೊರೊನಾ ಕಾರಣದಿಂದಾಗಿ ಕಳೆದ ವರ್ಷದಿಂದ ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಾಗಲೇ ಇಲ್ಲ. ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳವನ್ನು ನೀಡಿಲ್ಲ. ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕರು ಹಣ್ಣು ತರಕಾರಿ ವ್ಯಾಪಾರಿಗಳಾಗಿದ್ದಾರೆ.
ಇಂಥ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆ ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ 30 ರಷ್ಟು ವಿನಾಯ್ತಿ ನೀಡಿ ಶೇ 70 ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ ಎಂದಿದ್ದಾರೆ.

ವಾಹನ ಶುಲ್ಕ ಸೇರಿ ಇತರೆ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ನಿಷ್ಕ್ರಿಯವಾಗಿ ಕೂರುವುದು ಅಸಾಮಥ್ರ್ಯದ, ಲಾಬಿಗೆ ಮಣಿದಿರುವುದರ ಲಕ್ಷಣ. ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ಯಾವ ಕ್ರಮ ವಹಿಸಲಾಗಿದೆ ? ಪೂರ್ತಿ ಶುಲ್ಕವನ್ನು ಕಟ್ಟಲಾಗದ ಮಕ್ಕಳಿಗೆ ಮುಂದಿನ ತರಗತಿಗಳಿಗೆ ಪ್ರವೇಶ ನೀಡದೆ ಶೋಷಿಸುತ್ತಿರುವ ಶಾಲೆಗಳ ವಿಚಾರದಲ್ಲಿ ಯಾವ ಕ್ರಮ ವಹಿಸಲಾಗಿದೆ ?ಎಂದು ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕಿದೆ ಎಂದರು.

ಜುಲೈ 1 ರಿಂದ ಶೈಕ್ಷಣಿಕ ವರ್ಷದ ತರಗತಿಗಳನ್ನು ಆರಂಭಿಸಲು ಹಾಗೂ ದಿನಾಂಕ 15-6-2021 ರಿಂದಲೇ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಆದರೆ, ಶುಲ್ಕ ವಸೂಲಿ ಬಗ್ಗೆ ಇಲಾಖೆ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ. ಹೀಗಾಗಿ ಕಳೆದ ವರ್ಷದಂತೆಯೇ ಈ ಶೈಕ್ಷಣಿಕ ವರ್ಷದಲ್ಲೂ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ.

ಕಳೆದ ವರ್ಷ ಶಾಲೆಗೆ ಮಕ್ಕಳು ಕಾಲಿಡಲು ಸಾಧ್ಯವಾಗದಿದ್ದರೂ ಬಸ್ ಶುಲ್ಕವನ್ನೂ ವಸೂಲಿ ಮಾಡಿದ ಶಾಲೆಗಳೂ ಇವೆ. ಈ ವರ್ಷವೂ ಇದೇ ಪರಿಸ್ಥಿತಿ ಮುಂದುವರೆದಿದೆ. ಸಾಲದ್ದಕ್ಕೆ ಸರ್ಕಾರ ಶೇ 30 ರಷ್ಟು ಶುಲ್ಕ ಕಡಿತ ಮಾಡಿದ್ದು ಹಿಂದಿನ ವರ್ಷಕ್ಕೆ ಮಾತ್ರ, ಈ ವರ್ಷ ಸರ್ಕಾರವೇ ಪೂರ್ಣ ಶುಲ್ಕ ವಸೂಲಿ ಮಾಡಲು ಒಪ್ಪಿಗೆ ಕೊಟ್ಟಿದೆ ಎಂದು ಆಡಳಿತ ಮಂಡಳಿಗಳು ಪೋಷಕರಿಗೆ ಹೇಳುತ್ತಿವೆ. ಹೀಗಾಗಿ ತಕ್ಷಣ ಸರ್ಕಾರ ಈ ವಿಚಾರದಲ್ಲಿ ತನ್ನ ನಿಲುವು ಏನು ಎನ್ನುವುದನ್ನು ಸ್ಪಷ್ಟಪಡಿಸಬೇಕು ಮತ್ತು ಶುಲ್ಕದ ಪ್ರಮಾಣವನ್ನು ಸರ್ಕಾರವೇ ನಿರ್ಧರಿಸಿ ತನ್ನ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು ಎಂದಿದ್ದಾರೆ.

ಸಾರ್ವತ್ರಿಕವಾಗಿ ಎಲ್ಲಾ ಖಾಸಗಿ ಶಾಲೆಗಳಿಗೂ ಒಂದೇ ಪ್ರಮಾಣದ ಶುಲ್ಕ ನಿಗಧಿ ಮಾಡುವ ಬದಲಿಗೆ ಈ ವಿಚಾರದಲ್ಲಿ ಪೋಷಕರ ಸಂಘಗಳ ಜತೆ ಚರ್ಚಿಸಿ ವೈಜ್ಞಾನಿಕವಾದ ಮಾನದಂಡದಲ್ಲಿ ಶುಲ್ಕದ ಪ್ರಮಾಣವನ್ನು ನಿಗಧಿ ಮಾಡಬೇಕು. ಕೊರೋನಾ ಆರ್ಭಟ ಶುರುವಾಗುವುದಕ್ಕೂ ಹಿಂದಿನ ಸಾಲಿನಲ್ಲಿ ಶಾಲೆಗಳು ವಿಧಿಸಿದ್ದ ಶುಲ್ಕದ ಆಧಾರದಲ್ಲಿ ಈ ಬಾರಿಯ ಶುಲ್ಕದ ಪ್ರಮಾಣ ನಿರ್ಧರಿಸಬೇಕು. ಈ ವಿಚಾರದಲ್ಲಿ ತಕ್ಷಣ ಸರ್ಕಾರ ಮಧ್ಯ ಪ್ರವೇಶಿಸಿ ಪೋಷಕರು ಮತ್ತು ಆಡಳಿತ ಮಂಡಳಿಗಳ ನಡುವಿನ ಸಂಘರ್ಷ ನಿಲ್ಲಿಸಬೇಕೆಂದು ಒತ್ತಾಯ ಮಾಡಿದ್ದಾರೆ.

ಈ ಸಮಸ್ಯೆ ಮುಂದುವರೆದಷ್ಟೂ ಮಕ್ಕಳ ಕಲಿಕೆಯ ಮೇಲೆ, ಮಾನಸಿಕತೆ ಮೇಲೆ ಮತ್ತು ಶೈಕ್ಷಣಿಕ ವಾತಾವರಣದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಸಗಿ ಆಡಳಿತ ಮಂಡಳಿಗಳು ಮತ್ತು ಪೋಷಕರು ಪರಸ್ಪರ ಸಂಘರ್ಷಕ್ಕಿಳಿಯುವುದನ್ನು ನೋಡುತ್ತಾ ಕೂರುವುದು ಸರ್ಕಾರದ ಅರಾಜಕ ನಿಲುವಿನ ಸಂಕೇತ ಮತ್ತು ಕ್ರೌರ್ಯದ ಸಂಗತಿ. ಆದ್ದರಿಂದ ಈ ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು