ಬೆಂಗಳೂರು(10-10-2020): ಭಾರೀ ವಿರೋಧದಿಂದಾಗಿ ರಾಜ್ಯ ಸರಕಾರ ಕೊನೆಗೂ ವಿದ್ಯಾಗಮ ಯೋಜನೆ ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ.
ವಿದ್ಯಾಗಮದಿಂದಾಗಿಯೇ ಅನೇಕ ವಿದ್ಯಾರ್ಥಿಗಳಿಗೆ ಕೊರೋನಾ ಹರಡುತ್ತಿದೆ ಎಂದು ವಿರೋಧ ಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದವು. ಈ ಹಿನ್ನೆಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ತಾತ್ಕಾಲಿಕವಾಗಿ ಈ ಯೋಜನೆಯನ್ನು ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿರುವುದಾಗಿ ಹೇಳಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಸುಮಾರು 100ಕ್ಕೂ ಅಧಿಕ ಶಿಕ್ಷಕರು ಕೊರೊನಾಗೆ ಮೃತಪಟ್ಟಿದ್ದರು. ಮಕ್ಕಳಿಗೆ ಸೋಂಕು ಹರಡುವ ಭೀತಿ ಪೋಷಕರಲ್ಲಿ ಕೂಡ ಮೂಡಿತ್ತು. ಇದರ ಬೆನ್ನಲ್ಲೇ ಪ್ರತಿಪಕ್ಷಗಳು ವಿದ್ಯಾಗಮ ಯೋಜನೆ ಸ್ಥಗಿತಗೊಳಿಸುವಂತೆ ಸರಕಾರಕ್ಕೆ ಆಗ್ರಹಿಸಿತ್ತು. ಇಲ್ಲವಾದಲ್ಲಿ ಸರಕಾರದ ವಿರುದ್ಧ ಹೋರಾಟ ನಡೆಸುವುದಾಗಿ ಎಚ್ಚರಿಕೆಯನ್ನು ನೀಡಿತ್ತು.